ಕಾಂಗ್ರೆಸ್ ಟಿಕೆಟ್‌ಗೆ ಆರ್. ಮಂಜುನಾಥ್ ಭರವಸೆ: “ನಾಯಕತ್ವ ನನ್ನನ್ನು ಕೈಹಿಡಿಯಲಿದೆ”

ಹಿರಿಯೂರು , ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ತಮಗೇ ದೊರೆಯುವ ವಿಶ್ವಾಸವಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆರ್. ಮಂಜುನಾಥ್ ತಿಳಿಸಿದರು.

ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಯಾರೂ ನಿರೀಕ್ಷಿಸದ ರಾಜಕೀಯ ಬೆಳವಣಿಗೆಯಾಗಿದ್ದು, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ತಾಲೂಕು ಮಟ್ಟದಲ್ಲಿ ಸಂಘಟಿಸಿ ಬಲಪಡಿಸುವ ಕೆಲಸದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದರು.

1994ರಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿ ಯುವಕರನ್ನು ಪಕ್ಷದತ್ತ ಸೆಳೆಯುವ ಕೆಲಸ ಮಾಡಿದ್ದೇನೆ. ಬಳಿಕವೂ ಪಕ್ಷದ ಸಂಘಟನೆಗೆ ನಿರಂತರವಾಗಿ ದುಡಿದಿದ್ದೇನೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋತಿದ್ದರೂ ಪಕ್ಷದೊಂದಿಗೆ ನನ್ನ ನಂಟು ಮತ್ತು ಸೇವೆ ನಿರಂತರವಾಗಿದೆ ಎಂದು ಹೇಳಿದರು.

ತಮ್ಮ ರಾಜಕೀಯ ಪಯಣ ವಿದ್ಯಾರ್ಥಿ ನಾಯಕತ್ವದಿಂದ ಆರಂಭವಾಗಿ ಯುವ ಕಾಂಗ್ರೆಸ್ ಮೂಲಕ ರಾಜ್ಯಮಟ್ಟದ ನಾಯಕತ್ವದವರೆಗೆ ಬೆಳೆದಿದೆ. ಯುವಕರಲ್ಲಿ ರಾಜಕೀಯ ಜಾಗೃತಿ, ಸಂಘಟನಾ ಶಕ್ತಿ ಮತ್ತು ನಾಯಕತ್ವ ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇನೆ ಎಂದು ತಿಳಿಸಿದರು.

ಅಭಿವೃದ್ಧಿಯೇ ಮೊದಲ ಆದ್ಯತೆ

ಹಿರಿಯೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ತಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದ ಅವರು, ಶಿಕ್ಷಣ, ಉದ್ಯೋಗ, ಕುಡಿಯುವ ನೀರು ಹಾಗೂ ಗ್ರಾಮೀಣ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆ, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ, ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಕೈಗಾರಿಕೆಗಳ ಮೂಲಕ ಉದ್ಯೋಗ ಸೃಷ್ಟಿ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

ಹಿರಿಯೂರು ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಕೆರೆಗಳ ಪುನರುಜ್ಜೀವನ, ಜಲಮೂಲಗಳ ಸಂರಕ್ಷಣೆ ಹಾಗೂ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ತಲುಪಿಸುವ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸುವುದು ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ತಿಳಿಸಿದರು.

ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಪ್ರಯತ್ನ

ಸ್ಥಗಿತಗೊಂಡಿರುವ ಹಿರಿಯೂರು ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾರ್ಖಾನೆ ಪುನಶ್ಚೇತನಗೊಂಡರೆ ರೈತರಿಗೆ ಉತ್ತಮ ಮಾರುಕಟ್ಟೆ, ಸ್ಥಳೀಯ ಯುವಕರಿಗೆ ಉದ್ಯೋಗ ಮತ್ತು ಪ್ರದೇಶದ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಹೇಳಿದರು.

ಪ್ರತಿ ಹಳ್ಳಿಗೂ ಮೂಲಭೂತ ಸೌಲಭ್ಯ

ಹಳ್ಳಿ ಹಳ್ಳಿಗೂ ಉತ್ತಮ ರಸ್ತೆ, ಚರಂಡಿ ವ್ಯವಸ್ಥೆ, ಬೀದಿ ದೀಪಗಳು, ಆರೋಗ್ಯ ಸೇವೆ, ಶಿಕ್ಷಣ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ತಲುಪಿಸುವುದು ತಮ್ಮ ಅಭಿವೃದ್ಧಿ ಪರಿಕಲ್ಪನೆಯ ಪ್ರಮುಖ ಭಾಗವಾಗಿದೆ. ಗ್ರಾಮಗಳ ಅಭಿವೃದ್ಧಿಯೇ ಹಿರಿಯೂರಿನ ಸಮಗ್ರ ಅಭಿವೃದ್ಧಿಗೆ ಭದ್ರ ಅಡಿಪಾಯ ಎಂದು ಅವರು ಅಭಿಪ್ರಾಯಪಟ್ಟರು.

ಎಸ್‌ಐಆರ್ ಮೂಲಕ ಬಡವರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪಕ್ಷ ಬಡವರ ಪರವಾಗಿರುವ ಪಕ್ಷವಾಗಿದ್ದು ಜನರ ಹಿತಾಸಕ್ತಿಯನ್ನು ಕಾಪಾಡಲಿದೆ ಎಂದರು.

ಮೃತ ಶಾಸಕರ ಕುಟುಂಬಕ್ಕೆ ಟಿಕೆಟ್ ನೀಡುವ ಯಾವುದೇ ನಿಯಮ ಪಕ್ಷದಲ್ಲಿ ಇಲ್ಲ. ಸಂದರ್ಭಾನುಸಾರ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ತಾಲೂಕು ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ; ಇದ್ದರೂ ಪಕ್ಷದ ಹೈಕಮಾಂಡ್‌ನ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಎಚ್. ಮಂಜುನಾಥ್, ಪದ್ಮನಾಭ್, ಸಾದತ್ ಉಲ್ಲಾ, ಹೆಚ್.ಆರ್. ತಿಮ್ಮಯ್ಯ, ಕಲಾವತಿ, ಗೀತಾ, ಓಬಳೇಶ್, ದಾದಾಪೀರ್, ಮಹಮ್ಮದ್ ರಫೀಕ್, ಧ್ರುವಕುಮಾರ್ ಹಾಗೂ ಸುಬಾನ್ ಉಪಸ್ಥಿತರಿದ್ದರು.

ಕಾಂಗ್ರೆಸ್ ಟಿಕೆಟ್‌ಗೆ ಆರ್. ಮಂಜುನಾಥ್ ಭರವಸೆ: “ನಾಯಕತ್ವ ನನ್ನನ್ನು ಕೈಹಿಡಿಯಲಿದೆ”