ಅಜ್ಜಂಪುರ, ಜುಲೈ 5: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಜಲಸಂಪನ್ಮೂಲ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ಇಂದು ಅಜ್ಜಂಪುರದಲ್ಲಿ ಯೋಜನೆಯ ಮುಖ್ಯ ಕಾಲುವೆಯ ವೈ-ಜಂಕ್ಷನ್ ಹಾಗೂ ಚಿತ್ರದುರ್ಗ ಶಾಖಾ ಕಾಲುವೆ ಪ್ಯಾಕೇಜ್-4ರ ಬಾಟಲ್ ನೆಕ್ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Thank you for reading this post, don't forget to subscribe!ಮುಖ್ಯಮಂತ್ರಿಗಳ ಸೂಚನೆಯಂತೆ ನಡೆದ ಈ ಪರಿಶೀಲನಾ ಸಭೆಯಲ್ಲಿ ಕಾಮಗಾರಿಗಳ ಪ್ರಗತಿ, ಉಳಿದಿರುವ ಕಾರ್ಯಗಳು ಹಾಗೂ ಎದುರಾಗಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಸಚಿವರು ವಿವರವಾದ ಮಾಹಿತಿ ಪಡೆದರು. ಯೋಜನೆಯನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರ ಪೂರ್ಣಗೊಳಿಸಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನೆ ಸಂದರ್ಭದಲ್ಲಿ ಶಾಸಕರಾದ ಶ್ರೀ ಟಿ. ರಘುಮೂರ್ತಿ, ಶ್ರೀ ಕೆ.ಸಿ. ವೀರೇಂದ್ರ ಪಪ್ಪಿ, ಶ್ರೀ ಬಿ.ಜಿ. ಗೋವಿಂದಪ್ಪ, ಮಾಜಿ ಸಂಸದರಾದ ಶ್ರೀ ಬಿ.ಎನ್. ಚಂದ್ರಪ್ಪ ಹಾಗೂ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಜಿ.ಎಸ್. ಮಂಜುನಾಥ್, ಸುಹಾಸ್ ಸುಧಾಕರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಂಡ ಬಳಿಕ ಚಿತ್ರದುರ್ಗ ಸೇರಿದಂತೆ ಸುತ್ತಮುತ್ತಲಿನ ಭಾಗಗಳ ಸಾವಿರಾರು ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಸಿಗುವ ನಿರೀಕ್ಷೆಯಿದೆ.













