ಹಿರಿಯೂರಿನ ನೆಹರು ಮೈದಾನದಲ್ಲಿ ಪೂರ್ವ ಸಿದ್ಧತೆ ಪರಿಶೀಲಿಸಿದ ಶಾಸಕ ಟಿ. ರಘುಮೂರ್ತಿ
ಹಿರಿಯೂರು, ಜು.23:
Thank you for reading this post, don't forget to subscribe!ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ನುಡಿನಮನ ಕಾರ್ಯಕ್ರಮವು ಜುಲೈ 26ರಂದು ಹಿರಿಯೂರು ನಗರದ ನೆಹರು ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿವೆ.
ಈ ಹಿನ್ನೆಲೆಯಲ್ಲಿ ಶಾಸಕ ಟಿ. ರಘುಮೂರ್ತಿ ಅವರು ಇಂದು ನೆಹರು ಮೈದಾನಕ್ಕೆ ಭೇಟಿ ನೀಡಿ, ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು. ವೇದಿಕೆ ನಿರ್ಮಾಣ, ಸಾರ್ವಜನಿಕರ ಆಸನ ವ್ಯವಸ್ಥೆ, ವಾಹನ ನಿಲುಗಡೆ, ಕುಡಿಯುವ ನೀರು, ವಿದ್ಯುತ್ ಹಾಗೂ ಭದ್ರತಾ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಅಧಿಕಾರಿಗಳು ಮತ್ತು ಮುಖಂಡರೊಂದಿಗೆ ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಬಳಿಕ ಮಾತನಾಡಿದ ಶಾಸಕ ಟಿ. ರಘುಮೂರ್ತಿ, ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರು ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದು, ಅವರ ಸಾರ್ವಜನಿಕ ಸೇವೆ ಮತ್ತು ಅಭಿವೃದ್ಧಿ ಚಿಂತನೆಗಳನ್ನು ಸ್ಮರಿಸುವ ಉದ್ದೇಶದಿಂದ ನುಡಿನಮನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಎಲ್ಲ ರೀತಿಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಿ.ಜಿ. ಗೋವಿಂದಪ್ಪ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಂ.ಕೆ. ತಾಜ್ ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ ಮತ್ತು ಸಂಪತ್ ಕುಮಾರ್, ದಿವಂಗತ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್, ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಹಾಗೂ ಈರಲಿಂಗೇಗೌಡ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.










