ಗೃಹಜ್ಯೋತಿ ಸಮೀಕ್ಷೆ ಪರಿಶೀಲಿಸಿದ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣಗೃಹಜ್ಯೋತಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ21:
ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯ ಸಮೀಕ್ಷಾ ಕಾರ್ಯವು ಭರದಿಂದ ಸಾಗುತ್ತಿದ್ದು, ಸೋಮವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ಅವರು ಚಿತ್ರದುರ್ಗ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
 ಚಿತ್ರದುರ್ಗ ನಗರದ ಚಿಕ್ಕಪೇಟೆ, ಅಯ್ಯಣ್ಣನ ಪೇಟೆ ಪ್ರದೇಶದಲ್ಲಿ ಹಮ್ಮಿಕೊಳ್ಳಲಾದ ಗೃಹಜ್ಯೋತಿ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ವೀಕ್ಷಿಸಿದರು.
 ಈ ವೇಳೆ ಮಾತನಾಡಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಸರ್ಕಾರದಿಂದ ಗೃಹಜ್ಯೋತಿ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದು, ಬೆಸ್ಕಾಂ ಸಿಬ್ಬಂದಿ ಪರಿಷ್ಕರಣೆಗೆ ಬಂದಾಗ ಸಾರ್ವಜನಿಕರು ವಿದ್ಯುತ್ ಬಿಲ್, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಂಖ್ಯೆ ಮತ್ತು ಮತದಾರರ ಗುರುತಿನ ಚೀಟಿ ಇತ್ಯಾದಿ ಅಗತ್ಯ ದಾಖಲೆ ಒದಗಿಸುವ ಮೂಲಕ ಎಂದು ಗೃಹಜ್ಯೋತಿ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಉಳಿತಾಯ ಹಣದಿಂದ ಆರ್ಥಿಕ ಚಟುವಟಿಕೆಗಳಿಗೆ ಆಸರೆ: ಸಮೀಕ್ಷಾ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಅವರೊಂದಿಗೆ ಮಾತನಾಡಿದ ಗ್ರಾಹಕರು, ಸರ್ಕಾರದ ಗೃಹಜ್ಯೋತಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗೃಹಜ್ಯೋತಿ ಯೋಜನೆ ಬಡವರು ಹಾಗೂ ಮಧ್ಯಮ ವರ್ಗದ ಸೇರಿದಂತೆ ಎಲ್ಲಾ ವರ್ಗದ ಜನರಿಗೆ ದೊಡ್ಡ ಆಶಾಕಿರಣವಾಗಿದೆ. ಪ್ರತಿ ತಿಂಗಳು ಬರುತ್ತಿದ್ದ ವಿದ್ಯುತ್ ಬಿಲ್‍ನಿಂದ ವಿನಾಯಿತಿ ಸಿಕ್ಕಿರುವುದರಿಂದ ಉಳಿತಾಯವಾಗುತ್ತಿರುವ ಹಣವನ್ನು ನಾವು ದಿನಬಳಕೆಯ ಇತರೆ ಅಗತ್ಯ ವಸ್ತುಗಳ ಖರೀದಿ ಹಾಗೂ ಸಣ್ಣಪುಟ್ಟ ಆರ್ಥಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಸಹಕಾರಿಯಾಗಿದೆ ಎಂದು ಫಲಾನುಭವಿಗಳು ಹರ್ಷ ಹಂಚಿಕೊಂಡರು.
3.83 ಲಕ್ಷಕ್ಕೂ ಅಧಿಕ ಫಲಾನುಭವಿಗಳು: ಜಿಲ್ಲೆಯಲ್ಲಿ ಒಟ್ಟು 3,83,304 ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿದ್ದಾರೆ. ಬೆಸ್ಕಾಂ ಚಿತ್ರದುರ್ಗ ಹಾಗೂ ಹಿರಿಯೂರು ವಿಭಾಗ ವ್ಯಾಪ್ತಿಯಲ್ಲಿ ಈ ಸಮೀಕ್ಷಾ ಕಾರ್ಯ ವ್ಯವಸ್ಥಿತವಾಗಿ ಸಾಗುತ್ತಿದೆ. ಈ ಪೈಕಿ ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು ಶೇ. 55 ರಷ್ಟು ಭೌತಿಕ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.
 ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಲಿಂಗರಾಜ್ ಸೇರಿದಂತೆ ಮತ್ತಿತರರು ಇದ್ದರು

Thank you for reading this post, don't forget to subscribe!

ಗೃಹಜ್ಯೋತಿ ಸಮೀಕ್ಷೆ ಪರಿಶೀಲಿಸಿದ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣಗೃಹಜ್ಯೋತಿ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಿ