ರೈತರ ಭೂಮಿ ಉಳಿಸಲು ಜೆಡಿಎಸ್ ರಣಕಹಳೆ; ಬಿಡದಿ ಟೌನ್‌ಶಿಪ್ ವಿರುದ್ಧ ಆಗಸ್ಟ್ 9ರಿಂದ ಮಹಾ ಪಾದಯಾತ್ರೆ!

ಬೆಂಗಳೂರು, ಆ. 5:

Thank you for reading this post, don't forget to subscribe!

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ರೈತರ ಕೃಷಿ ಭೂಮಿಯನ್ನು ರಕ್ಷಿಸುವ ಉದ್ದೇಶದಿಂದ ಜನತಾ ದಳ (ಜಾತ್ಯತೀತ) ಪಕ್ಷವು ಆಗಸ್ಟ್ 9, 10 ಮತ್ತು 11ರಂದು ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

ಈ ಸಂಬಂಧ ಬುಧವಾರ ಬೆಂಗಳೂರಿನ ಜೆ.ಪಿ. ಭವನದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಿ ಪಾದಯಾತ್ರೆಯ ಯಶಸ್ಸಿಗೆ ಕೈಗೊಳ್ಳಬೇಕಾದ ಅಗತ್ಯ ಸಿದ್ಧತೆಗಳ ಕುರಿತು ಪಕ್ಷದ ಹಿರಿಯ ನಾಯಕರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖ ಮುಖಂಡರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು.

ಆಗಸ್ಟ್ 9ರಿಂದ 11ರವರೆಗೆ ಬಿಡದಿಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ನಡೆಯಲಿರುವ ಈ ಪಾದಯಾತ್ರೆಯ ಮೂಲಕ ರೈತರ ಕೃಷಿ ಜಮೀನುಗಳನ್ನು ರಕ್ಷಿಸುವುದು ಹಾಗೂ ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುವುದು ಪಕ್ಷದ ಪ್ರಮುಖ ಉದ್ದೇಶವಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಸಭೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ಜನರು ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಕೂಡ ವಿಸ್ತೃತವಾಗಿ ಚರ್ಚಿಸಲಾಯಿತು. ಬರಪೀಡಿತ ಪ್ರದೇಶಗಳ ಜನರಿಗೆ ಅಗತ್ಯ ನೆರವು ಒದಗಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವ ಕುರಿತು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಭೆಯಲ್ಲಿ ಕರೆ ನೀಡಲಾಯಿತು.

ರೈತರ ಭೂಮಿ ಉಳಿಸಲು ಜೆಡಿಎಸ್ ರಣಕಹಳೆ; ಬಿಡದಿ ಟೌನ್‌ಶಿಪ್ ವಿರುದ್ಧ ಆಗಸ್ಟ್ 9ರಿಂದ ಮಹಾ ಪಾದಯಾತ್ರೆ!